ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ; ಸೆಪ್ಟೆಂಬರ್ 5ರ ಪ್ರತಿಭಟನೆ ಕೈಬಿಟ್ಟ ಸಿಜೆಪಿ

ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಮೆರವಣಿಗೆಯನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ರದ್ದುಗೊಳಿಸಿದೆ.

ಸಿಜೆಪಿ ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿತ್ತು. ಈ ಬಗ್ಗೆ ಪಕ್ಷದ ವಕ್ತಾರ ಸೌರವ್ ದಾಸ್ ಅವರು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದು, ಸರ್ಕಾರದ ಭರವಸೆ ಮತ್ತು ನ್ಯಾಯಾಂಗದ ಆದೇಶವನ್ನು ಗಮನದಲ್ಲಿಟ್ಟುಕೊಂಡು ಮೆರವಣಿಗೆ ಹಿಂಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

ಆಗಸ್ಟ್ 31ರಂದು ಮೆರವಣಿಗೆ ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಹಾಗೂ ಪೊಲೀಸರ ಜವಾಬ್ದಾರಿ ಎಂದು ನ್ಯಾಯಪೀಠ ಹೇಳಿತ್ತು.

ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ಮೆಚ್ಚುಗೆ

ಸಿಜೆಪಿ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮೆಚ್ಚಿದ್ದಾರೆ. ಎರಡೂ ಕಡೆಯವರು ಪರಸ್ಪರ ನಂಬಿಕೆ ಇಟ್ಟುಕೊಂಡು ಮುಕ್ತ ಮನಸ್ಸಿನಿಂದ ಚರ್ಚಿಸಿದರೆ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಬಹುದು ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ಪ್ರಕ್ರಿಯೆ ಕುರಿತು ನ್ಯಾಯಪೀಠಕ್ಕೆ ಮಾಹಿತಿ ನೀಡಿದ್ದಾರೆ.

ಕ್ರಿಮಿನಲ್ ಹಿನ್ನೆಲೆ ಹೊಂದಿರುವ 2,873 ವ್ಯಕ್ತಿಗಳ ವಿರುದ್ಧ ಹೊಸದಾಗಿ FIR ದಾಖಲಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿವೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಪ್ರತಿಭಟನೆಗಳಲ್ಲಿ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ಸರ್ಕಾರ ಬದ್ಧವಾಗಿದೆ ಎಂದು ತುಷಾರ್ ಮೆಹ್ತಾ ಹೇಳಿದ್ದಾರೆ. ಪರಿಹಾರ ನೀಡುವ ಮಾರ್ಗಸೂಚಿಗಳ ಕುರಿತು ಮುಂದಿನ ಚರ್ಚೆ ನಡೆಯಲಿದೆ.

NEET ಪ್ರತಿಭಟನೆ ಪ್ರಕರಣವೇ ವಿವಾದಕ್ಕೆ ಕಾರಣ

ಜುಲೈನಲ್ಲಿ ನಡೆದ NEET ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ಭರವಸೆಯನ್ನು ಕೇಂದ್ರ ಸರ್ಕಾರ ಈಡೇರಿಸಿಲ್ಲ ಎಂದು ಸಿಜೆಪಿ ಆರೋಪಿಸಿತ್ತು.

ದೆಹಲಿ ಸೇರಿದಂತೆ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದು ಹಾಗೂ NEET ಪ್ರಶ್ನೆಪತ್ರಿಕೆ ಸೋರಿಕೆಯ ಬಳಿಕ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವಂತೆ ಸಿಜೆಪಿ ಒತ್ತಾಯಿಸಿತ್ತು.

ಈ ಬೇಡಿಕೆಗಳು ಈಡೇರಿಲ್ಲ ಎಂದು ಆರೋಪಿಸಿ ಸೆಪ್ಟೆಂಬರ್ 5ರಂದು ಮೆರವಣಿಗೆ ನಡೆಸಲು ಪಕ್ಷ ನಿರ್ಧರಿಸಿತ್ತು. ಇದೀಗ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಗಿದೆ.

Leave a Reply

Your email address will not be published. Required fields are marked *