ಬೆಂಗಳೂರು: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಇ-ಕೆವೈಸಿ ಮಾಡಿಸಿಕೊಳ್ಳಲು ನೀಡಲಾಗಿದ್ದ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಿದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಇ-ಕೆವೈಸಿ ಅವಧಿಯನ್ನು ವಿಸ್ತರಿಸಲಾಗಿದೆ. ನವೆಂಬರ್ 30ರ ನಂತರ ಯಾವುದೇ ಕಾರಣಕ್ಕೂ ಗಡುವನ್ನು ಮತ್ತೆ ವಿಸ್ತರಿಸುವುದಿಲ್ಲ ಎಂದು ಆಹಾರ ಇಲಾಖೆ ಸ್ಪಷ್ಟಪಡಿಸಿದೆ.
ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ಫಲಾನುಭವಿಗಳಿಗೆ ನಿರಂತರವಾಗಿ ದೊರೆಯುವಂತೆ ಮಾಡಲು ಬಾಕಿ ಇರುವ ಅರ್ಹ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಇಲಾಖೆ ಸೂಚಿಸಿದೆ.
ಇನ್ನೂ 39 ಲಕ್ಷ ಫಲಾನುಭವಿಗಳ ಇ-ಕೆವೈಸಿ ಬಾಕಿ
ನವೆಂಬರ್ 10ರವರೆಗೆ ಇ-ಕೆವೈಸಿ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿತ್ತು. ರಾಜ್ಯದ ಸುಮಾರು 2.67 ಕೋಟಿ ಫಲಾನುಭವಿಗಳ ಪೈಕಿ 2.27 ಕೋಟಿ ಮಂದಿ ಈಗಾಗಲೇ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಇನ್ನೂ ಸುಮಾರು 39 ಲಕ್ಷ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುವುದು ಬಾಕಿ ಇದೆ.
ಉಳಿದ ಫಲಾನುಭವಿಗಳಿಗೂ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರ್ಕಾರ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಿದೆ. ಹೀಗಾಗಿ, ಇನ್ನು ಬಾಕಿ ಉಳಿಸಿಕೊಂಡಿರುವವರು ಕೊನೆಯ ದಿನದವರೆಗೆ ಕಾಯದೆ ಆದಷ್ಟು ಬೇಗ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಉತ್ತಮ.


