ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ನಿಂದ ರಿಲೀಫ್ ಸಿಕ್ಕಿದೆ. ಆರೋಪಿಗಳಿಗೆ ಈ ಹಿಂದೆ ನೀಡಲಾಗಿದ್ದ ಜಾಮೀನು ರದ್ದು ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಎ-3 ಪವನ್, ಎ-5 ನಂದೀಶ್, ಎ-9 ಧನರಾಜ್, ಎ-10 ವಿನಯ್ ಹಾಗೂ ರಾಘವೇಂದ್ರ ಅವರಿಗೆ ನೀಡಲಾಗಿದ್ದ ಜಾಮೀನು ರದ್ದುಪಡಿಸುವಂತೆ ಪ್ರಾಸಿಕ್ಯೂಷನ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ವಿನೋದ್ ಚಂದ್ರನ್ ಅವರ ಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದೆ.
ಸುಪ್ರೀಂ ಕೋರ್ಟ್ ಹೇಳಿದ್ದೇನು?
ಜಾಮೀನು ನೀಡಿದ ಆದೇಶ ಪ್ರಶ್ನಿಸಿ ಒಂದೂವರೆ ವರ್ಷದ ಬಳಿಕ ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿರುವುದನ್ನು ಸುಪ್ರೀಂ ಕೋರ್ಟ್ ಗಮನಿಸಿದೆ. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ವಜಾಗೊಳಿಸಿದೆ.
ಈ ಹಿಂದೆಯೂ ಅರ್ಜಿ ವಜಾ ಮಾಡಿದ್ದ ಹೈಕೋರ್ಟ್
ಐವರು ಆರೋಪಿಗಳಿಗೆ ನೀಡಿದ್ದ ಜಾಮೀನು ರದ್ದುಪಡಿಸುವಂತೆ ಪ್ರಾಸಿಕ್ಯೂಷನ್ ಈ ಹಿಂದೆ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಆದರೆ ಹೈಕೋರ್ಟ್ ಕೂಡ ಆ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಇದೀಗ ಸುಪ್ರೀಂ ಕೋರ್ಟ್ ಕೂಡ ಅರ್ಜಿಯನ್ನು ವಜಾಗೊಳಿಸಿರುವುದರಿಂದ ಐವರು ಆರೋಪಿಗಳಿಗೆ ನೀಡಲಾಗಿದ್ದ ಜಾಮೀನು ಮುಂದುವರಿಯಲಿದೆ. ಆದರೆ ಪ್ರಕರಣದ ವಿಚಾರಣೆ ಮತ್ತು ಆರೋಪಿಗಳ ಮೇಲಿನ ಕಾನೂನು ಪ್ರಕ್ರಿಯೆ ಪ್ರತ್ಯೇಕವಾಗಿ ಮುಂದುವರಿಯಲಿದೆ.


