17ನೇ ದಿನವೂ ನಿಲ್ಲದ ವಿದ್ಯಾರ್ಥಿಗಳ ಹೋರಾಟ; ಜಾರ್ಖಂಡ್ ವಿಧಾನಸಭೆ ಮುತ್ತಿಗೆಗೆ ಯತ್ನ

ರಾಂಚಿ, ಆಗಸ್ಟ್ 10: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 17ನೇ ದಿನಕ್ಕೆ ಕಾಲಿಟ್ಟಿದೆ. ಸೋಮವಾರ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದ್ದು, ಸಾವಿರಾರು ವಿದ್ಯಾರ್ಥಿಗಳು ಜಾರ್ಖಂಡ್ ವಿಧಾನಸಭೆಯತ್ತ ಮೆರವಣಿಗೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ವಿದ್ಯಾರ್ಥಿಗಳು ಮುನ್ನುಗ್ಗುವುದನ್ನು ತಡೆಯಲು ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು. ಆದರೆ ವಿದ್ಯಾರ್ಥಿಗಳು ಬ್ಯಾರಿಕೇಡ್‌ಗಳನ್ನು ಮುರಿದು ಮುಂದೆ ಸಾಗಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಜಲಫಿರಂಗಿ ಬಳಸಿ ಪ್ರತಿಭಟನಾಕಾರರನ್ನು ಚದುರಿಸಲು ಪ್ರಯತ್ನಿಸಿದ್ದಾರೆ.

ಜಲಫಿರಂಗಿಯಿಂದ ನೀರು ರಾಚುತ್ತಿದ್ದರೂ ವಿದ್ಯಾರ್ಥಿಗಳು ಹಿಂದೆ ಸರಿಯಲಿಲ್ಲ. ಬದಲಿಗೆ ನೀರಿನ ಮಧ್ಯೆಯೇ ಪ್ರತಿಭಟನಾಕಾರರು ಘೋಷಣೆ ಕೂಗುತ್ತಾ ಹೋರಾಟ ಮುಂದುವರಿಸಿದ್ದಾರೆ. ಕೆಲವರು ಜಲಫಿರಂಗಿಯ ನೀರಿನ ನಡುವೆಯೇ ಡ್ಯಾನ್ಸ್ ಮಾಡುತ್ತಿರುವ ದೃಶ್ಯವೂ ಕಂಡುಬಂದಿದೆ.

ರಾಜ್ಯದ ವಿವಿಧೆಡೆಯಿಂದ ರಾಂಚಿಗೆ ಬಂದ ವಿದ್ಯಾರ್ಥಿಗಳು

ರಾಜ್ಯದ ವಿವಿಧ ಜಿಲ್ಲೆಗಳಿಂದ ರೈಲು, ಬಸ್ ಹಾಗೂ ಖಾಸಗಿ ವಾಹನಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳು ರಾಂಚಿಗೆ ಆಗಮಿಸಿದ್ದಾರೆ. ಕೈಯಲ್ಲಿ ತ್ರಿವರ್ಣ ಧ್ವಜ ಮತ್ತು ಬ್ಯಾನರ್‌ಗಳನ್ನು ಹಿಡಿದು ‘ವಿಧಾನಸಭಾ ಚಲೋ’ ನಡೆಸಿದ ವಿದ್ಯಾರ್ಥಿಗಳು ಪೊಲೀಸರ ತಡೆಯನ್ನು ಮೀರಿ ವಿಧಾನಸಭೆಯತ್ತ ಹೆಜ್ಜೆ ಹಾಕಿದ್ದಾರೆ.

ವಿದ್ಯಾರ್ಥಿಗಳ ಹೋರಾಟಕ್ಕೆ ದೇವೇಂದ್ರ ಮಹತೋ ಬೆಂಬಲ

ಪರೀಕ್ಷಾ ಅಕ್ರಮಗಳ ವಿರುದ್ಧ ಕಳೆದ 9 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿ ನಾಯಕ ದೇವೇಂದ್ರ ಮಹತೋ ಕೂಡ ಆಂಬುಲೆನ್ಸ್ ಮೂಲಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದಾರೆ.

ಈ ವೇಳೆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಅವರು, ಪೊಲೀಸರೊಂದಿಗೆ ವಾಗ್ವಾದ ನಡೆಸಿ ಸಮಯ ವ್ಯರ್ಥ ಮಾಡದೆ ವಿಧಾನಸಭೆ ಪ್ರವೇಶಿಸಲು ಬೇರೆ ಮಾರ್ಗಗಳನ್ನು ಹುಡುಕುವಂತೆ ವಿದ್ಯಾರ್ಥಿಗಳನ್ನು ಹುರಿದುಂಬಿಸಿದ್ದಾರೆ.

ಸರ್ಕಾರ-ವಿದ್ಯಾರ್ಥಿಗಳ 6ನೇ ಸುತ್ತಿನ ಮಾತುಕತೆಯೂ ವಿಫಲ

ವಿದ್ಯಾರ್ಥಿಗಳ ಬೇಡಿಕೆಗಳ ಕುರಿತು ಸರ್ಕಾರ ರಚಿಸಿರುವ ಸಮಿತಿ ಮತ್ತು ವಿದ್ಯಾರ್ಥಿ ಸಂಘಟನೆಗಳ ನಡುವೆ ನಡೆದ 6ನೇ ಸುತ್ತಿನ ಮಾತುಕತೆಯೂ ವಿಫಲವಾಗಿದೆ.

ಸರ್ಕಾರವು ಶೇ.98ರಷ್ಟು ಬೇಡಿಕೆಗಳನ್ನು ಈಡೇರಿಸಲು ಸಿದ್ಧವಿದ್ದು, ಮೂರು ಪರೀಕ್ಷೆಗಳನ್ನು ರದ್ದುಗೊಳಿಸಲು ಒಪ್ಪಿಕೊಂಡಿದೆ ಎಂದು ತಿಳಿಸಿದೆ. ಆದರೆ ವಿದ್ಯಾರ್ಥಿಗಳು 13 ಪರೀಕ್ಷೆಗಳನ್ನು ರದ್ದುಗೊಳಿಸಬೇಕು ಮತ್ತು ಪರೀಕ್ಷಾ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

JPSCಯಲ್ಲಿ ಪ್ರಮುಖ ರಾಜೀನಾಮೆ

ಪರೀಕ್ಷಾ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಸಿಐಡಿ ಸಮನ್ಸ್ ನೀಡಿದ ಬೆನ್ನಲ್ಲೇ ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗದ (JPSC) ಮೂವರು ಸದಸ್ಯರು ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಮುನ್ನ ಜುಲೈ 22ರಂದು JPSC ಅಧ್ಯಕ್ಷ ಎಲ್. ಖಿಯಾಂಗ್ತೆ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ರಾಂಚಿಯಲ್ಲಿ ಬಿಗಿ ಭದ್ರತೆ

ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಂಚಿ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಪ್ರಮುಖ ಶಾಲೆಗಳನ್ನು ಮುಚ್ಚಲಾಗಿದೆ. ಜಿಲ್ಲಾ ಗಡಿಗಳು ಮತ್ತು ಹೆದ್ದಾರಿಗಳಲ್ಲಿ ಪೊಲೀಸರು ವಾಹನಗಳನ್ನು ತೀವ್ರ ತಪಾಸಣೆಗೆ ಒಳಪಡಿಸುತ್ತಿದ್ದಾರೆ.

ಇದೇ ವೇಳೆ ಆರು ಪ್ರಮುಖ ವಿದ್ಯಾರ್ಥಿ ನಾಯಕರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದಾರೆ. ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ ಬಿಜೆಪಿ ನಾಯಕರು ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಅಧಿಕೃತ ನಿವಾಸದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಅಕ್ರಮ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಭರವಸೆ ನೀಡಿದ್ದಾರೆ. ಆದರೆ ಸಿಬಿಐ ತನಿಖೆಗೆ ಆದೇಶಿಸುವವರೆಗೆ ಹೋರಾಟ ಹಿಂಪಡೆಯುವುದಿಲ್ಲ ಎಂದು JPSC-JSSC ಸುಧಾರಣಾ ಮಂಚ್ ನಾಯಕ ರವೀಂದ್ರ ಪಾಸ್ವಾನ್ ಸ್ಪಷ್ಟಪಡಿಸಿದ್ದಾರೆ.

 

 

Leave a Reply

Your email address will not be published. Required fields are marked *