ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್, ಕರ್ನಾಟಕದಲ್ಲಿ 814 ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ. ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ವಿವಿಧ ವಿಷಯಗಳ ಒಟ್ಟು 814 ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 25ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕ ಪಾವತಿಸಲು ಡಿಸೆಂಬರ್ 26 ಕೊನೆಯ ದಿನವಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾವ ವಿಷಯದಲ್ಲಿ ಎಷ್ಟು ಹುದ್ದೆಗಳಿವೆ?

ಒಟ್ಟು 814 ಹುದ್ದೆಗಳನ್ನು ವಿವಿಧ ವಿಷಯಗಳಿಗೆ ಹಂಚಿಕೆ ಮಾಡಲಾಗಿದೆ. ಕನ್ನಡ ವಿಷಯದಲ್ಲಿ 89 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಂಗ್ಲಿಷ್ ವಿಷಯದಲ್ಲಿ ಅತಿ ಹೆಚ್ಚು ಅಂದರೆ 145 ಹುದ್ದೆಗಳಿವೆ.

ಉಳಿದಂತೆ ಇತಿಹಾಸದಲ್ಲಿ 50, ಅರ್ಥಶಾಸ್ತ್ರದಲ್ಲಿ 90, ರಾಜ್ಯಶಾಸ್ತ್ರದಲ್ಲಿ 25, ಸಮಾಜಶಾಸ್ತ್ರದಲ್ಲಿ 25 ಹಾಗೂ ಭೂಗೋಳಶಾಸ್ತ್ರದಲ್ಲಿ 10 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ವಾಣಿಜ್ಯ ಶಾಸ್ತ್ರದಲ್ಲಿ 150, ಭೌತಶಾಸ್ತ್ರದಲ್ಲಿ 30, ರಸಾಯನಶಾಸ್ತ್ರದಲ್ಲಿ 30, ಗಣಿತದಲ್ಲಿ 30, ಜೀವಶಾಸ್ತ್ರದಲ್ಲಿ 30 ಹಾಗೂ ಕಂಪ್ಯೂಟರ್ ಸೈನ್ಸ್‌ನಲ್ಲಿ 110 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಲ್ಲಿ ನೇಮಕಾತಿ ಅಧಿಸೂಚನೆಯನ್ನು ಓದಿ, ತಮ್ಮ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ, ವಯೋಮಿತಿ, ಮೀಸಲಾತಿ, ಅರ್ಜಿ ಶುಲ್ಕ ಹಾಗೂ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬೇಕು.

ಸರ್ಕಾರಿ ಉಪನ್ಯಾಸಕರ ಹುದ್ದೆಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಕೊನೆಯ ದಿನದವರೆಗೆ ಕಾಯದೆ ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸುವುದು ಉತ್ತಮ.

Leave a Reply

Your email address will not be published. Required fields are marked *